ಬೆಂಗಳೂರು: ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೆಡ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಮುಂದಿನ ಮೂರು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಹಾವೇರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಇರಲಿದೆ.

ಕರಾವಳಿ ಭಾಗದಲ್ಲಿ ಭಾರಿ ಮಳೆ : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.
ಎಲ್ಲೆಲ್ಲಿ ವರ್ಷಧಾರೆ : ಉಡುಪಿ, ಮಂಗಳೂರು, ಕುಮಟಾ, ಹೊನ್ನಾವರ, ಸಿದ್ದಾಪುರ, ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ನರಸಿಂಹರಾಜಪುರ, ಹಾಸನ, ಸಕಲೇಶಪುರ, ಬಾಳೆಹೊನ್ನೂರು, ಆಗುಂಬೆ, ಹೊನ್ನಾವರ, ಕಾರವಾರ, ಮಂಕಿ, ಶಿರಾಲಿ, ಕೋಟಾ, ಕ್ಯಾಸಲ್ರಾಕ್, ಗೋಕರ್ಣ, ಕದ್ರಾ, ಕುಂದಾಪುರ, ಕಾರ್ಕಳ ಹಾಗೂ ಅಂಕೋಲಾದಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಭಾಗದಲ್ಲಿ 120 ಮಿ.ಲೀ. ಮೀಟರ್ಗೂ ಹೆಚ್ಚು ಮಳೆ ವರದಿಯಾಗಿದೆ.
ಹಲವೆಡೆ ಶಾಲೆಗೆ ರಜೆ : ಮಳೆ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕುಗಳಾದ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ, ಉಡುಪಿ, ಕೊಡಗು ಜಿಲ್ಲೆಯ ಕೆಲವೆಡೆ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಹಾಗೆಯೇ, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.