ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ರಾಜ್ಯಾದ್ಯಂತ ಪರ-ವಿರೋಧ ಚರ್ಚೆಯಾಗುತ್ತಿದೆ. ರಾಜ್ಯಾದ್ಯಂತ ದರ್ಶನ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನೊಂದೆಡೆ ಕೆಲ ಅಭಿಮಾನಿಗಳು ಸೇರಿದಂತೆ ನಟ-ನಟಿಯರು ಕೂಡ ದರ್ಶನ್ ಪರ ಧ್ವನಿ ಎತ್ತುತ್ತಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಒಬ್ಬೊಬ್ಬರಾಗಿ ದರ್ಶನ್ ಬಗ್ಗೆ ಮಾತನಾಡುತ್ತಿದ್ದಾರೆ. ಇದೀಗ ನಟಿ ಹಾಗೂ ಬಿಗ್ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ನಟಿ ಹಾಗೂ ಕಾಂಗ್ರೆಸ್ ನಾಯಕಿ ಭಾವನ, ವಿಜೆ ಹೇಮಲತಾ, ತೆಲುಗು ನಟ ನಾಗಶೌರ್ಯ, ಹಂಸಲೇಖ, ವಿ. ಮನೋಹರ್, ನಟಿ ಸ್ಪೂರ್ತಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಅನೇಕರು ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ಇನ್ನು ಕೆಲವರು ದರ್ಶನ್ ವಿರುದ್ಧ ಜೋರಾಗಿ ಧ್ವನಿ ಎತ್ತಿದ್ದಾರೆ. ಅದರಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಮೊದಲಿಗರಾಗಿ ನಿಲ್ಲುತ್ತಾರೆ. ಇದೀಗ ದಿವ್ಯಾ ಸುರೇಶ್ ಕೂಡ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅವರು ಏನು ಹೇಳಿದ್ದಾರೆ ಎಂಬುದನ್ನು ನಾವೀಗ ತಿಳಿಯೋಣ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸುದ್ದಿ ಕೇಳಿ ನನಗೆ ನಿಜಕ್ಕೂ ಶಾಕ್ ಆಯಿತು. ಆದರೆ, ಈ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿರುವುದನ್ನು ಕೇಳಿ ತುಂಬಾ ಬೇಜಾರಾಯಿತು. ಸದ್ಯ ಈ ಪ್ರಕರಣ ನ್ಯಾಯಾಲಯದಲ್ಲಿದೆ. ಯಾವ ತೀರ್ಪು ಬರಲಿದೆ ಎಂಬ ಕುತೂಹಲ ನನ್ನಲ್ಲಿದೆ. ಅಶ್ಲೀಲ ಮೆಸೇಜ್ ವಿಚಾರಕ್ಕೆ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ನನಗೂ ಕೂಡ ಸಾಕಷ್ಟು ಅಶ್ಲೀಲ ಮಸೇಜ್ ಮತ್ತು ವಿಡಿಯೋಗಳು ಬಂದಿವೆ. ಅದೆಲ್ಲವೂ ಕೊಚ್ಚೆ ಇದ್ದಂತೆ, ಅದಕ್ಕೆ ಕಲ್ಲು ಎಸೆದು ಗಲೀಜು ಮಾಡಿಕೊಳ್ಳಬಾರದು. ಅಶ್ಲೀಲ ಸಂದೇಶಗಳನ್ನು ನಿರ್ಲಕ್ಷಿಸುವುದೇ ಒಳ್ಳೆಯದು. ನಾನಂತೂ ಪ್ರತಿಕ್ರಿಯೆ ನೀಡೋದೇ ಇಲ್ಲ ಎಂದು ಖಾಸಗಿ ಸುದ್ದಿ ವಾಹಿನಿಯ ಜತೆ ದಿವ್ಯಾ ಸುರೇಶ್ ಮಾತನಾಡಿದ್ದಾರೆ.
ನಟ ದರ್ಶನ್ ಬಂಧನವಾದ ಯಾರೊಬ್ಬರು ಮಾತನಾಡಲಿಲ್ಲ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ ಬಳಿಕ ಒಬ್ಬೊಬ್ಬರೆ ದರ್ಶನ್ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲವರು ದರ್ಶನ್ ಪರ ಧ್ವನಿಗೂಡಿಸಿ ರೇಣುಕಾಸ್ವಾಮಿ ಮಾಡಿದ್ದು ತಪ್ಪು ಎನ್ನುತ್ತಿದ್ದಾರೆ. ಇನ್ನು ಕೆಲವರು ದರ್ಶನ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅದನ್ನು ಪೊಲೀಸರಿಗೆ ಹೇಳಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಅಮಾನವೀಯವಾಗಿ ಸಾಯಿಸುವುದು ಸರಿಯಲ್ಲ ಎಂಬ ಅಭಿಪ್ರಾಯಗಳು ಸಹ ಜನರಲ್ಲಿ ಕೇಳಿಬರುತ್ತಿದೆ.
ಏನಿದು ಪ್ರಕರಣ?
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.