ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾನ ಹಾನಿಕರ ಜಾಹೀರಾತು ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಜನಪ್ರತಿನಿಧಿಗಳ ವಿಶೇಷ (42ನೇ ಮ್ಯಾಜಿಸ್ಟ್ರೇಟ್) ನ್ಯಾಯಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು. ಕಳೆದ ವಿಚಾರಣೆ ವೇಳೆ ಖುದ್ದು ಹಾಜರಿಯಿಂದ ರಾಹುಲ್ ವಿನಾಯ್ತಿ ಪಡೆದುಕೊಂಡಿದ್ದು, ಜೂನ್ 7ರಂದು ಹಾಜರಾಗುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದರು.
ಪ್ರಕರಣದ ಆರೋಪಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂದಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರಿಗೆ ನಮಸ್ಕರಿಸಿದರು. ಈ ವೇಳೆ ರಾಹುಲ್ ಗಾಂಧಿ ಪರ ವಕೀಲರಿಂದ ನಿಶಾನ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ರೂ. ಮೌಲ್ಯದ ಆಸ್ತಿಯ ಶ್ಯೂರಿಟಿ ನೀಡಿದರು.
ವಕೀಲರ ಮನವಿ ಪರಿಗಣಿಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದರು.