ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಪುಟ್ಟ ಮಕ್ಕಳೇ ಈ ಮಾರಕ ಜ್ವರಕ್ಕೆ ಬಲಿಯಾಗುತ್ತಿದ್ದು, ಇದೀಗ ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ.
ಹೊಳೆನರಸೀಪುರ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತ ಬಾಲಕಿ ಎಂದು ಗುರುತಿಸಲಾಗಿದೆ.
ಡೆಂಗ್ಯೂ ಜ್ವರದಿಂದಲೇ ಬಾಲಕಿ ಮೃತಪಟ್ಟಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ. ಸಮೃದ್ಧಿ ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ನಿರಂತರ ಚಿಕಿತ್ಸೆ ನೀಡಿದರೂ ಕೂಡ ಬಾಲಕಿ ಆರೋಗ್ಯ ಸುಧಾರಿಸದ ಕಾರಣ ಹಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಪೋಷಕರು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಮೃದ್ಧಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ತೀವ್ರ ಜ್ವರದಿಂದ ಸಾವನ್ನಪ್ಪಿದ ಕಾರಣ ಡೆಂಗ್ಯೂನಿಂದ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವೈದ್ಯರು ಅಧೀಕೃತವಾಗಿ ಮಾಹಿತಿ ನೀಡಬೇಕಿದೆ.
ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ. ಹೊಳೆನರಸೀಪುರ ತಾಲೂಕಿನಲ್ಲೇ ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ. ಡೆಂಗ್ಯೂನಿಂದಲೇ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಆರೋಗ್ಯ ಇಲಾಖೆ ಖಚಿತ ಪಡಿಸಿದ್ದು, ಸದ್ಯ ಇಂದು ಮತ್ತು ನಿನ್ನೆ ಸಾವನ್ನಪ್ಪಿರುವ ಮಕ್ಕಳ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.
ಮೈಸೂರು, ಉತ್ತರ ಕನ್ನಡದಲ್ಲಿ ಡೆಂಗ್ಯೂಗೆ ಮೊದಲ ಬಲಿ
ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಮೃತ ಅಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಿಂದ ಸಾವು ಸಂಭವಿಸಿದ ಮೊದಲ ಪ್ರಕರಣ ಇದಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿಯಾಗಿದೆ. ಅಂಕೋಲದ ಬಾವಿಕೇರಿ ನಿವಾಸಿ ಹರೇರಾಮ್ ಗೋಪಾಲ್ ಭಟ್ ಮೃತ ದುರ್ದೈವಿ. ಹರೇರಾಮ್ ಗೋಪಾಲ್ ಭಟ್ ಕಳೆದ ವಾರದಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದಾರೆ.