ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ. ಆದರೂ ಬಿಡಬ್ಲ್ಯೂಎಸ್ಎಸ್ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಹೀಗಾಗಿ, ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ, ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ವಿಧಾನಸೌಧ ಮೆಟ್ಟಿಲುಗಳ ಮುಂಭಾಗ ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರು ಒದಗಿಸಲೇಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೆ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲೂ ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ, ಧರಣಿ ಮಾಡಲಿ ನಾನು ಇದಕ್ಕೆ ಬದ್ಧ ಎಂದರು.
ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ: 14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ ಎಂದು ತಿಳಿಸಿದರು.