ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸಾದರು.
ನಗರದ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ”ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡುವುದು ಇಷ್ಟೇ. ನಿಮ್ಮಗಳ ಶುಭ ಹಾರೈಕೆ, ಭಗವಂತನ ಕೃಪೆ ಹಾಗೂ ತಂದೆ – ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ” ಎಂದರು.