ತುಮಕೂರು: ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಮುಂದಿನ 15 ದಿನದೊಳಗಾಗಿ ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತ ಫಲಾನುಭವಿಗಳಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮುಂದಿನ 15 ದಿನಗಳ ಕಾಲಮಿತಿಯೊಳಗೆ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಅನುಷ್ಠಾನ ಮಾಡಬೇಕು. ಕಾರ್ಯಕ್ರಮ ಅನುಷ್ಠಾನದಲ್ಲಿ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಂದಿನ ಸಭೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿರುವಂತೆ ಸೂಚನೆ ನೀಡಿದ ಅವರು, ಅಲ್ಪಸಂಖ್ಯಾತ ಫಲಾನುಭವಿಗಳ ಆಯ್ಕೆ ಪಟ್ಟಿಯೊಂದಿಗೆ ಸಭೆಗೆ ಹಾಜರಾಗುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಗಳ ಮಾಹಿತಿ ಪಡೆದ ಅವರು, ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಅನುದಾನದ ಸದ್ಭಳಕೆ ಮಾಡಿಕೊಳ್ಳಬೇಕು. ಹೊಸದಾಗಿ ಆಯ್ಕೆಗೊಂಡಿರುವ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿ ಸದಸ್ಯರು ಎಲ್ಲಾ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಈಗಾಗಲೇ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿರುವ ಇಲಾಖೆಗಳು ತ್ವರಿತಗತಿಯಲ್ಲಿ ಪ್ರಗತಿ ಸಾಧಿಸಬೇಕು ಮತ್ತು ಸರ್ಕಾರ ಹಾಗೂ ಜಿಲ್ಲಾ ಪಂಚಾಯಿತಿಯಿ0ದ ಅನುದಾನ ಬಿಡುಗಡೆಯಾಗದ ಇಲಾಖೆಗಳು ಅನುದಾನ ಬಿಡುಗಡೆಗೊಂಡ ನಂತರ ಫಲಾನುಭವಿಗಳ ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ ಅಹಮ್ಮದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.