ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ ಜಿಲ್ಲಾಧಿಕಾರಿ

ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ ಜಿಲ್ಲಾಧಿಕಾರಿ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ 6 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ತುರ್ತು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಎಲ್ಲಾ ತಾಲ್ಲೂಕು ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಗೂಗಲ್ ಮೀಟ್ ಮೂಲಕ  ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು- ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಸಿದರು.

ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 0816-155304, 0816-2213404 ಅಥವಾ ವಾಟ್ಸಪ್ ಸಂಖ್ಯೆ: 7304975519ನ್ನು ಸಂಪರ್ಕಿಸಬೇಕೆAದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಕಳೆದ ಒಂದು ವಾರದಿಂದ  ಸುರಿಯುತ್ತಿರುವ ಮಳೆಗೆ ಹಾನಿಗೊಳಗಾದ ಬೆಳೆ, ಮನೆ, ಜಾನುವಾರುಗಳ ತಾಲ್ಲೂಕುವಾರು ಮಾಹಿತಿಯನ್ನು ಪಡೆದ ಅವರು ಮಳೆ ಹಾನಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ನಿರ್ದೇಶಿಸಿದರು.

ಇದೇ ರೀತಿ ಮಳೆ ಮುಂದುವರೆದರೆ ಮಳೆ-ಗಾಳಿ-ಸಿಡಿಲಿನಿಂದ ರಕ್ಷಿಸಿಕೊಳ್ಳುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು.  ಯಾವುದೇ ಪ್ರಾಣ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *