ಧಾರವಾಡ : ಸಮಾಜದ ಎಲ್ಲರಿಗೂ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಪ್ರಜೆಗಳೇ ಪ್ರಜಾಪ್ರಭುತ್ವದ ಜೀವಾಳ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಕರ್ನಾಟಕ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.
ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಯುವ ಸಮುದಾಯ ಜಾಗೃತವಾದರೆ ಮಾತ್ರ ಪ್ರಜಾಪ್ರಭುತ್ವ ಸದೃಡವಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ನಂಬಿಗೆ ಉಳ್ಳವರು, ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಇಂದು ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಸಮಾಜವನ್ನು ಉಳಿಸುವ, ಪ್ರಜಾಪ್ರಭುತ್ವ ಕಾಪಾಡುವ ಕಾರ್ಯ ಯುವಜನರ ಕೈಯಲ್ಲಿದೆ. ಇಂದಿನ ಯುವಕರು ಜಾಗೃತರಾಗಬೇಕು ಎಂದರು.
ಮೀಸಲಾತಿ ಪರಿಕಲ್ಪನೆ ಬಂದಿದ್ದು ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ ಎಂದು ಸಚಿವರು ಹೇಳಿದರು.
ಇಂದು ಡ್ರಗ್ಸ್ ಒಂದು ಶಾಪವಾಗಿ, ಅಭಿವೃದ್ಧಿ ವಿರೋಧಿಯಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ. ಸಂಪೂರ್ಣವಾಗಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಎಂದು ಸಚಿವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಐಎಎಸ್ ಪ್ರೊಬೇಷನರ್ ಅಧಿಕಾರಿ ರಿತೀಕಾ ವರ್ಮಾ ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು, ಇತರರು ಇದ್ದರು.
For More Updates Join our WhatsApp Group :
