ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ, ಐಪಿಎಲ್ನ ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿರುವ ಜಯ್ ಶಾ, “ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ. ಆಧುನಿಕ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಅದನ್ನು ಗೌತಮ್ ಅವರು ತೀರಾ ಹತ್ತಿರದಿಂದ ಕಂಡಿದ್ದಾರೆ. ಬಹುನಿರೀಕ್ಷೆಯ ಕೋಚ್ ಸ್ಥಾನವನ್ನು ಅವರು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.