ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ : ಕೇಂದ್ರಕ್ಕೆ ಮನವಿ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ : ಕೇಂದ್ರಕ್ಕೆ ಮನವಿ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ ಅವರು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ. 179.30 ಕೋಟಿ ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸೈನಿಕ ಶಾಲೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನುಳಿದ ಸಿವಿಲ್‌ ಕಾಮಗಾರಿಗಳನ್ನು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುವ ರೂ. 30 ಕೋಟಿ ಕಾಮಗಾರಿ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಪರಿಶೀಲಿಸಿ ವರದಿಯನ್ನು ಸಲ್ಲಿಸಬೇಕು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್‌ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡಬೇಕು. ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಯ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಈ ಪ್ರಾಧಿಕಾರದಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕಗಳ ಅಭಿವೃದ್ಧಿ, ಸೌಲಭ್ಯ ಕಲ್ಪಿಸುವ ಕುರಿತಂತೆ ನೀಲ ನಕ್ಷೆಯನ್ನು ಸಿದ್ಧಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಸೂಚಿಸಿದರು.

ಬಳಿಕ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ರೂ.75.29 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್‌ ಎರಡನೇ ವಾರದ ಒಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಬೇಕು.

Leave a Reply

Your email address will not be published. Required fields are marked *