ಸೋಮವಾರದಿಂದ ಟಿಕೆಟ್ ದರ ಏರಿಕೆ ತಾತ್ಕಾಲಿಕವಾಗಿ ತಡೆ.
ಬೆಂಗಳೂರು: ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆ ಮಾಡುತ್ತಿರುವುದಕ್ಕೆ BMRCL ವಿರುದ್ಧ ಜನಾಕ್ರೋಶ ಭುಗಿಲೆದಿತ್ತು. ರಾಜಕೀಯ ಜಟಾಪಟಿಗೂ ಕಾರಣವಾಗಿತ್ತು. ಈ ಮಧ್ಯೆ ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ವಿರುದ್ಧ ನಿನ್ನೆ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು. ಇಂದು ತಕ್ಷಣದ ಹಸ್ತಕ್ಷೇಪವನ್ನು ಕೋರಿ ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಫೋನ್ನಲ್ಲಿ ಮಾತನಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಮೆಟ್ರೋ ದರ ಏರಿಕೆ ಬಗ್ಗೆ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಸಂಭಾಷಣೆ ಮಾಡಿರುವೆ. ಫೆ.9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ದೇಶದಲ್ಲೇ ನಮ್ಮ ಮೆಟ್ರೋ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ಮೆಟ್ರೋ ಪ್ರಯಾಣ ದರ ವ್ಯತ್ಯಾಸದ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಹೊರೆಯಾಗಲಿದೆ. ಸಾರ್ವಜನಿಕ ಸಾರಿಗೆ ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಪ್ರಸ್ತಾವಿತ ದರ ಏರಿಕೆ ತಾತ್ಕಾಲಿಕವಾಗಿ ತಡೆ ಹಿಡಿಯಲು ಸೂಚಿಸಿದ್ದು, ಸೋಮವಾರದಿಂದ ಮೆಟ್ರೋ ಟೆಕೆಟ್ ದರ ಹೆಚ್ಚಳವಾಗಲ್ಲ. ಪ್ರಯಾಣಿಕರ ಅನುಕೂಲಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.
For More Updates Join our WhatsApp Group :



