ಬೆಂಗಳೂರು: ಅಪರೂಪದ ಕಾಯಿಲೆ ಹೊಂದಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಗುರುವಾರ ಭರವಸೆ ನೀಡಿದರು.
ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಆಯೋಜಿಸಿದ್ದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವವರಿಗೆ ಉಚಿತ ಔಷಧಿ ನೀಡುವ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಇಡೀ ದೇಹವನ್ನೆ ಅಲುಗಾಡಿಸುವ ಬೆನ್ನುಮೂಳೆ ಸ್ನಾಯು ಕ್ಷೀಣತೆಯಂಥ ಅಪಾಯವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ. ಇದು ಅನುವಂಶಿಯವಾಗಿ ಶಿಶುಗಳಲ್ಲಿ ಹಾಗೂ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಅನುವಂಶೀಯ ಕಾಯಿಲೆಗೆ ಔಷಧಿಗಳು ದೊರೆಯುವಂತೆ ಮಾಡಲು ಸರ್ಕಾರ ಮುಂದಾಗಿದೆ. ಹೆಚ್ಚುವರಿಯಾಗಿ 75 ಕೋಟಿ ರೂ.ಗಳನ್ನು ನೀಡಲಾಗಿದ್ದು, ಇಂತಹ ಕಾಯಿಲೆಗಳ ಚಿಕಿತ್ಸೆಗಾಗಿ ವಿಶೇಷ ನಿಧಿ ಕೂಡ ಆರಂಭಿಸಲಾಗಿದೆ. ಎಂದು ಹೇಳಿದರು.
ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಪಾಲುದಾರಿಕೆಯಲ್ಲಿ ಅಪರೂಪದ ಕಾಯಿಲೆ ಹೊಂದಿರುವ ಮಕ್ಕಳ ಚಿಕಿತ್ಸೆಗಾಗಿ ದೇಶದಲ್ಲೇ ಮೊದಲ ಬಾರಿ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲಾಗಿದ್ದು, ಉಚಿತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ ಅಪರೂಪದ ಕಾಯಿಲೆ ಎದುರಿಸುತ್ತಿರುವವರಿಗೆ ಅಗತ್ಯ ಚಿಕಿತ್ಸೆ ಹಾಗೂ ಔಷಧ ಒದಗಿಸಲು ಖಾಸಗಿ ಸಂಸ್ಥೆಗಳೂ ಸರ್ಕಾರದ ಜತೆಗೆ ಕೈಜೋಡಿಸಬೇಕು ಎಂದು ಹೇಳಿದರು.