ದೇಶದ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ್ದು, ಕೆಲವೇ ರಾಜ್ಯಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಅಕ್ಟೋಬರ್ 8ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಅಕ್ಟೋಬರ್ 03) ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ತ್ರಿಪುರಾಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕೇರಳಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಈಶಾನ್ಯ ಭಾಗದ ಹಲವೆಡೆ ವ್ಯಾಪಕವಾಗಿ ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾಗಿ ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಒಡಿಶಾದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿತೆ ಎಂದು ತಿಳಿಸಿದೆ.
ಅಕ್ಟೋಬರ್ 3ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಕ್ಟೋಬರ್ 4ರಂದು ಗಂಗಾ ಪಶ್ಚಿಮ ಬಂಗಾಳ, ಅಕ್ಟೋಬರ್ 4 & 5ರಂದು ಅಸ್ಸಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಅಕ್ಟೋಬರ್ 6-8ರ ವರೆಗೆ ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹವಾಮಾನದ ವಿವರ: ಮುಂದಿನ ಒಂದು ಕೇರಳ, ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಲಕ್ಷದ್ವೀಪದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ಪುದುಚೇರಿ, ಕಾರೈಕಲ್ನಲ್ಲಿ ಅಲ್ಲಲ್ಲಿ ಚುದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ ಮತ್ತು ತೆಲಂಗಾಣದಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಅಕ್ಟೋಬರ್ 3ರಿಂದ 6ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅಕ್ಟೋಬರ್ 3ರಿಂದ ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಇನ್ನು ಈ ವಾರಾಂತ್ಯದಲ್ಲಿ ಮೂರು ದಿನಗಳ ಕಾಲ ಛತ್ತೀಸ್ಗಢದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.