ಭಾರತ: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಜೂನ್ 18ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾದ್ರೆ, ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅದರಲ್ಲೂ ಇನ್ನೂ ಕೆಲವೇ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಈಗಾಗಲೇ ನಿನ್ನೆ (ಜೂನ್ 12) ಜಮ್ಮು-ಕಾಶ್ಮೀರ ಮತ್ತು ಪಶ್ಚಿಮ ರಾಜಸ್ಥಾನ, ದೆಹಲಿಯ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಅಲ್ಲದೆ, ಪಂಜಾಬ್, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲೂ ಹೆಚ್ಚಿನ ತಾಪಮಾನ ದಾಖಲಾಗಿದೆ. ಇನ್ನು ಕರಾವಳಿ ಕರ್ನಾಟಕ, ಗೋವಾ, ತೆಲಂಗಾಣ, ಒಡಿಶಾ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಎಲ್ಲೆಲ್ಲಿ ಎಷ್ಟು ದಿನ ಮಳೆ?: ಚಂಡಮಾರುತದ ಪರಿಚಲನೆ ಹಿನ್ನೆಲೆ ಇಂದು (ಜೂನ್ 13) ಆಂಧ್ರಪ್ರದೇಶ, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಜೂನ್ 13ರಿಂದ 18ರ ವರೆಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂನಚನೆ ನೀಡಿದೆ.
ಜೂನ್ 13-15ರ ವರೆಗೆ ಕೊಂಕಣ ಮತ್ತು ಗೋವಾ, ಮಹಾರಾಷ್ಟ್ರದ ಮರಾಠವಾಡದ ಘಾಟ್ ಪ್ರದೇಶಗಳಲ್ಲಿ, ಜೂನ್ 14ರಿಂದ 18ರ ವರೆಗೆ ಒಡಿಶಾ, ಜಾರ್ಖಂಡ್, ಛತ್ತೀಸ್ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಜೊತೆಗೆ ಈ ಭಾಗದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಇಂದು (ಜೂನ್ 13) ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವಸಾಧ್ಯತೆ ಹೆಚಚ್ಚಿದೆ. ಆದ್ದರಿಂದ ಈ ಭಾಗಗಳ ಜನರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಎಲ್ಲೆಲ್ಲಿ ತಾಪಮಾನ ಏರಿಕೆ?: ಜೂನ್ 13 ರಿಂದ ಹಲವು ದಿನಗಳವರೆಗೆ ರಾಜಸ್ಥಾನ, ನವದೆಹಲಿ ಮತ್ತು ಹರಿಯಾಣದಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಜೂನ್ 14ರಿಂದ 18ರ ವರೆಗೆ ಪಶ್ಚಿಮ ರಾಜಸ್ಥಾನದಲ್ಲಿ ಗಾಳಿ ಪ್ರಮಾಣ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನ ವಿವರ: ಇಂದು ರಾಷ್ಟ್ರ ರಾಜಧಾನಿ ನವದೆಹಲಿಯ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 39°C ಮತ್ತು 44°C ವರೆಗೂ ದಾಖಲಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




