ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಈ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಸಹಿತ ಭಾರಿ ಮಳೆ ಆಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಕರಾವಳಿ ಪ್ರದೇಶದಲ್ಲಿ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದ್ದು, ಗಂಟೆಗೆ 35 ರಿಂದ 55 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.