ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಾಂತ ಭಾರಿ ಮಳೆಯಾಗುತ್ತಿರುವುದರಿಂದ ಮೂರು ತಾಲೂಕು ಆಡಳಿತಗಳು ಅಂಗನವಾಡಿ ಸೇರಿದಂತೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಈ ಕುರಿತು ಮೂರು ತಾಲೂಕಿನ ತಹಶೀಲ್ದಾರ್ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳು ಅಪ್ಪಟ ಮಲೆನಾಡಿನ ತಾಲೂಕು. ಇಲ್ಲಿ ಪ್ರತಿ ವರ್ಷ ಉತ್ತಮ ಮಳೆ ಅಗುತ್ತದೆ. ಅಲ್ಲದೇ ತಾಲೂಕಿನ ವಿವಿಧ ಭಾಗಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳಗಳನ್ನು ದಾಟಿಕೊಂಡು ದೂರದ ಊರುಗಳಿಂದ ಬಸ್ನಲ್ಲಿ ಆಗಮಿಸುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ ತಾಲೂಕು ಆಡಳಿತ ತಮ್ಮ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದೆ.

ಇಂದು ರಜೆ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಶನಿವಾರ ದಂದು ಪೂರ್ಣ ತರಗತಿಗಳನ್ನು ನಡೆಸಬೇಕೆಂದು ಆದೇಶಿಸಲಾಗಿದೆ.
ರಾಜ್ಯದ ಕೆಲವು ಕಡೆಗಳಲ್ಲಿ ವರುಣನ ಆರ್ಭಟ ಕಡಿಮೆಯಾಗಿದೆ. ಆದರೆ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 3 ರಿಂದ ಅಂದರೆ ಇಂದಿನಿಂದ ಮಳೆ ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬಿತ್ತನೆ ಮಾಡುವ ಮತ್ತು ಮಾಡಲು ಅಣಿಯಾಗಿರುವ ರೈತರ ಆತಂಕಕ್ಕೆ ಕಾರಣವಾಗಿದೆ.
ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ: ಉಳಿದ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳವರೆಗೆ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಮಳೆಗಿಂತ ಗಾಳಿ ವೇಗ ಹೆಚ್ಚು ಇರಲಿದೆ ಎಂದು ಇಲಾಖೆ ತಿಳಿಸಿದೆ.



