ರಾಜ್ಯದಲ್ಲಿ ಮಳೆಯ ಅಬ್ಬರ ಶುರು..!

ರಾಜ್ಯದಲ್ಲಿ ಮಳೆಯ ಅಬ್ಬರ ಶುರು..!

ಮುಂದಿನ 7 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಬಿರು ಬಿಸಿಲಿಗೆ ಹೈರಾಣಾಗಿದ್ದ ಕರುನಾಡ ಜನತೆಗೆ ವರುಣ ದೇವ ಕೊನೆಗೂ ಕೃಪೆ ತೋರಿದ್ದಾನೆ. ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಆರಂಭವಾಗಿದ್ದು, ಮೇ 1 ರಿಂದ ಮುಂದಿನ ಒಂದು ವಾರದ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ವಿಶೇಷವಾಗಿ ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ 5 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್’ ಘೋಷಣೆ ಮಾಡಲಾಗಿದೆ. ಕಾಫಿನಾಡು ಚಿಕ್ಕಮಗಳೂರು, ಹಾಸನ, ಕೊಡಗು, ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರುವ ಸಾಧ್ಯತೆಯಿದ್ದು, ಗುಡುಗು ಮಿಂಚು ಸಹಿತ 115.6 ಮಿ.ಮೀ ನಿಂದ 204.4 ಮಿ.ಮೀ ವರೆಗೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ, ರಾಜ್ಯದ ಇತರ 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಸೇರಿದಂತೆ ಮಧ್ಯ ಕರ್ನಾಟಕದ ದಾವಣಗೆರೆ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *