ಮಾಜಿ ಸಿಎಂ BSY ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಸಂಬಂಧ ಬಂಧಿಸದಂತೆ ನೀಡಿರುವ ಆದೇಶ ತೆರವು ಕೋರಿ ಸಿಐಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಗುರುವಾರ ಅರ್ಜಿಯ ವಿಚಾರಣೆ ವೇಳೆ ಸಿಐಡಿ ಪರ ವಕೀಲರು, ಯಡಿಯೂರಪ್ಪ ಅವರನ್ನು ಬಂಧಿಸದಂತೆ ವಿಧಿಸಿರುವ ಆದೇಶ ತೆರವುಗೊಳಿಸಲು ಕೋರಿ ಆಕ್ಷೇಪಣೆ ಸಲ್ಲಿಸಿದರು. ಈ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಬಿಎಸ್​ವೈ ಪರ ವಕೀಲರು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ಜೊತೆಗೆ ಆರೋಪಿಯನ್ನು
ಬಂಧಿಸದಂತೆ ನ್ಯಾಯಪೀಠ ನೀಡಿದ್ದ ಆದೇಶ ವಿಸ್ತರಿಸಿ ವಿಚಾರಣೆಯನ್ನು ಆಗಸ್ಟ್ 30 ಕ್ಕೆ ನಿಗದಿ ಪಡಿಸಿತು.

ಪ್ರಕರಣ ಹಿನ್ನೆಲೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಮೊದಲು ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಖುದ್ದು ವಿಚಾರಣೆಗೆ ವಿನಾಯಿತಿ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

750 ಪುಟಗಳ ಚಾರ್ಜ್​ಶೀಟ್: ಇನ್ನು ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಐಡಿ ಅಧಿಕಾರಿಗಳು ಈಗಾಗಲೇ ಒಂದನೇ ತ್ವರಿತಗತಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸುಮಾರು 750 ಪುಟಗಳಿರುವ ಚಾರ್ಜ್‌ಶೀಟ್ ಇದಾಗಿದ್ದು, 75 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *