ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ (ಭಾನುವಾರ) ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ಶೀಗೆ ಹುಣ್ಣಿಮೆ, ದೀಪಾವಳಿ ಅಮಾವಾಸ್ಯೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸವದತ್ತಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಈ ವಿಶೇಷ ನೇರ ಬಸ್ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಬಸ್ಗಳಿಂದ ಸಾವಿರಾರು ಭಕ್ತರಿಗೆ ಬಹಳಷ್ಟು ಅನುಕೂಲವಾಗಿದೆ. ಬರುವ ಹುಣ್ಣಿಮೆಯ ದಿನ, ಮಂಗಳವಾರ ಹಾಗೂ ಶುಕ್ರವಾರದಂದು ಕೂಡ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದಿತ್ತು ಎಂದು ತಿಳಿಸಿದ್ದಾರೆ.
ಭಕ್ತರು, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹುಣ್ಣಿಮೆಯ ದಿನ ಡಿಸೆಂಬರ್ 15ರಂದು ಭಾನುವಾರ ಹಾಗೂ ಮುಂದಿನ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರಗಳಂದು ಬಸ್ಗಳು ಸಂಚರಿಸಲಿವೆ. ಅಂದರೆ, ಡಿಸೆಂಬರ್ 17, 20, 24 ಹಾಗೂ 27ರಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ನೇರ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಸ್ಗಳು ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಿಂದ ಹೊರಡಲಿವೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಈ ವಿಶೇಷ ಬಸ್ ವ್ಯವಸ್ಥೆಯನ್ನು ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.