ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಈ ಮೂಲಕ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.
7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡುವಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ ಸಿಎಂಗೆ ನೀಡಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.