ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ರ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಪ್ರಕಟವಾಗಿದೆ. ಈ ಪಟ್ಟಿಯಲ್ಲಿ ಬಿಹಾರದ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ 71 ಅಭ್ಯರ್ಥಿಗಳನ್ನು ಘೋಷಿಸಿದ್ದು, 30 ಸ್ಥಾನಗಳನ್ನು ಇನ್ನೂ ಘೋಷಿಸಲಾಗಿಲ್ಲ. ಕಣಕ್ಕಿಳಿಯಲಿರುವ ಪ್ರಮುಖ ನಾಯಕರಲ್ಲಿ ಮಂಗಲ್ ಪಾಂಡೆ, ರೇಣು ದೇವಿ ಮತ್ತು ತಾರಕೇಶ್ವರ ಸಿಂಗ್ ಸೇರಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುತ್ತಿರುವ 101 ಸ್ಥಾನಗಳಲ್ಲಿ, ಮೊದಲ ಪಟ್ಟಿಯು 71 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದೆ. ಎನ್‌ಡಿಎಯಲ್ಲಿ ಸೀಟು ಹಂಚಿಕೆ ಕುರಿತು ಬಿಕ್ಕಟ್ಟು ಮುಂದುವರಿದಿರುವ ನಡುವೆಯೇ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಇಬ್ಬರ ಹೆಸರೂ ಇದೆ. ಆದರೆ, ಬಿಹಾರ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.
ಸಾಮ್ರಾಟ್ ಚೌಧರಿ ತಾರಾಪುರದಿಂದ ಸ್ಪರ್ಧಿಸಲಿದ್ದಾರೆ. ವಿಜಯ್ ಸಿನ್ಹಾ ಲಖಿಸರಾಯ್‌ನಿಂದ ಸ್ಪರ್ಧಿಸಲಿದ್ದಾರೆ. ಇನ್ನೂ 30 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸುವುದು ಬಾಕಿ ಇದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14ರಂದು ಎಣಿಕೆ ನಡೆಯಲಿದೆ.
ಭಾನುವಾರ ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಗೆ ತನ್ನ ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿತು. ಬಿಜೆಪಿ ಮತ್ತು ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಮತ್ತು ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂ (ಎಸ್) ತಲಾ 6 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
For More Updates Join our WhatsApp Group :




