ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 16ರಂದು (ಇಂದು) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಅ.16 ಮತ್ತು 17ರಂದು ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು (ಅ.16) ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20ರವರೆಗೆ ದಸರಾ ರಜೆ ಇದೆ. ಆದರೆ, ಖಾಸಗಿ ಶಾಲೆಗಳು ಸೋಮವಾರದಿಂದಲೇ ಪುನರಾರಂಭವಾಗಿವೆ.
ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಸುಮಾರು 60 ಜನ ಎನ್ಡಿಆರ್ಎಫ್/ಎಸ್ಡಿಆರ್ಎಫ್ ಸಿಬ್ಬಂದಿಯನ್ನು ಬೆಂಗಳೂರಿಗೆ ಮರು ನಿಯೋಜಿಸಲಾಗಿದೆ.