ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 17ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಅವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುವುದು. ಅವರ ವಿರುದ್ಧ ಕಾನೂನು ಪ್ರಕಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೊಲೀಸರ ನಡೆ ಸೇಡಿನ ರಾಜಕಾರಣ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೇರೆ ಏನನ್ನೂ ಹೇಳಲು ಸಾಧ್ಯವಿಲ್ಲದ ಕಾರಣ ಅವರು (ಬಿಜೆಪಿ) ಇದನ್ನೇ ಹೇಳಬೇಕಾಗಿದೆ’ ಎಂದು ಹೇಳಿದ್ದಾರೆ
ನಾಲ್ಕು ತಿಂಗಳ ಹಿಂದೆಯೇ ದೂರು ದಾಖಲಾಗಿರುವುದರಿಂದ ಪ್ರಕರಣದ ವಿಳಂಬದ ಬಗ್ಗೆ ಕೇಳಿದಾಗ, ಧ್ವನಿ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಆರೋಪಿ ಪ್ರಮುಖ ವ್ಯಕ್ತಿ ಮತ್ತು ವಿಐಪಿ ಆಗಿರುವುದರಿಂದ ಕ್ರಮ ಕೈಗೊಳ್ಳುವ ಮುನ್ನ ಎಲ್ಲವನ್ನೂ ಪರಿಶೀಲಿಸಬೇಕಾಗಿದೆ ಎಂದರು