ಕೋಲಾರ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳು ಇಂದು ಕೋಲಾರ ನಗರ ಬಂದ್ಗೆ ಕರೆ ನೀಡಿದ್ದು, ಬೆಳಗ್ಗೆಯೇ ಪ್ರತಿಭಟನಾಕಾರರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು.
ನಿನ್ನೆ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮೂಲಕ ಬಂದ್ಗೆ ಬೆಂಬಲ ನೀಡುವಂತೆ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಇಂದು ಆಟೋ, ಕಾರು ಮುಂತಾದ ವಾಹನಗಳನ್ನು ತಡೆದು ಬಂದ್ಗೆ ಬೆಂಬಲ ನೀಡಬೇಕೆಂದು ಸೂಚಿಸಿದರು.
ಬೆಳಗ್ಗೆ ನಗರದ ಕೆ.ಎಸ್.ಆರ್.ಟಿ.ಸಿ ಡಿಪೋ ಮುಂಭಾಗ ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಡಿಪೋ ಮುಂದೆ ಟೈರ್ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ತಡೆದು ಬೆಂಕಿ ನಂದಿಸಿದರು.
ಬಸ್ ನಿಲ್ದಾಣಕ್ಕೆ ಬಂದ ಬಸ್ಗಳನ್ನು ವಾಪಸ್ ಡಿಪೋಗೆ ಕಳುಹಿಸಲಾಯಿತು. ನಿಲ್ದಾಣ ಬಸ್ಗಳಿಲ್ಲದೆ ಬಿಕೋ ಎನ್ನುತ್ತಿದೆ. ಇತ್ತ ಬಸ್ ಸಿಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಸಂಸತ್ತಿನಲ್ಲಿ ಅಮಿತಾ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಲವಂತವಾಗಿ ಬಂದ್ ಮಾಡಬಾರದು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.