KPSC || KAS ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಎಡವಟ್ಟು : ಮರು ಪರೀಕ್ಷೆಗೆ ಸಿಎಂ ಸೂಚನೆ

ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಂತ್ರಿ, ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಎಸ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಕೆಎಎಸ್ ಪ್ರಶ್ನೆ ಪತ್ರಿಕೆ ಕನ್ನಡಕ್ಕೆ ಅನುವಾದ ಮಾಡುವಾಗ ಆಗಿರುವ ಎಡವಟ್ಟುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಗಳಲ್ಲಿನ ತಪ್ಪುಗಳನ್ನು ಉಲ್ಲೇಖಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಕೆಪಿಎಸ್ ಸಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕನ್ನಡದ ಹೆಸರಾಂತ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವು ಕನ್ನಡ ಸಾಹಿತಿಗಳು ಕೂಡಾ ಇದರ ವಿರುದ್ಧ ಧ್ವನಿ ಎತ್ತಿದ್ದರು.

Leave a Reply

Your email address will not be published. Required fields are marked *