ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಹಾಗೂ 10,000 ಸಾವಿರ ಎಕರೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡುವುದಕ್ಕೆ ದೊಡ್ಡ ಮಟ್ಟದ ಚರ್ಚೆ ನಡೆದಿದೆ. ಇದೀಗ ಈ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರು ಹಾಗೂ ಜೆಡಿಎಸ್ ಮುಖಂಡರಾದ ಎಚ್.ಡಿ ದೇವೇಗೌಡ ಅವರು ಮಧ್ಯಪ್ರವೇಶ ಮಾಡಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಎಚ್.ಡಿ ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಯೋಜನೆಯಿಂದ ಆಸ್ತಿ ಬೆಲೆ ಏರಿಕೆಯಾಗಿತ್ತು. ಇದೀಗ ಈ ನಿಟ್ಟಿನಲ್ಲಿ ಹೊಸ ಚರ್ಚೆ ಶುರುವಾಗಿದೆ. ಏನಿದು ಯೋಜನೆ ಹಾಗೂ ಈ ಯೋಜನೆಗೆ ಸಂಬಂಧಿಸಿದಂತೆ ಎಚ್.ಡಿ ದೇವೇಗೌಡ ಅವರು ಹೇಳಿದ್ದೇನು ಎನ್ನುವುದನ್ನು ನೋಡೋಣ.

ರಾಮನಗರ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ಶಿಪ್ ಯೋಜನೆಗೆ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ರೈತರ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂದು ಎಚ್.ಡಿ ದೇವೇಗೌಡ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುದೀರ್ಘ ಪತ್ರವನ್ನು ಬರೆದಿರುವ ಅವರು, ಇಲ್ಲಿ ಯಾವ ಕಾರಣಕ್ಕೆ ಭೂಸ್ವಾಧೀನ ಬೇಡ ಎನ್ನುವುದನ್ನು ವಿವರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರುಗಳಲ್ಲಿರುವ ಸುಮಾರು 10 ಸಾವಿರ ಎಕರೆ ಜಮೀನನ್ನು ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ತಮಗೆ ತಿಳಿದಿರುವಂತೆ ರಾಮನಗರ ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕೈಗಾರಿಕಾಭಿವೃದ್ಧಿಗಾಗಿ ಸಾವಿರಾರು ಎಕರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನು ಸ್ಥಾಪಿಸಿರುವುದು ಸರಿಯಷ್ಟೆ. ಅಲ್ಲದೇ, ರಾಮನಗರ ಜಿಲ್ಲೆ ಇದ್ದು ಹಲವಾರು ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಉದ್ಯಮಗಳು ಖಾಸಗಿಯಾಗಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ. ಉಳಿದಂತೆ ಇರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿಗಾಗಿ ಅವಲಂಬಿತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಜಮೀನಿನ ಸುತ್ತ ಲಕ್ಷಾಂತರ ಮರ-ಗಿಡಗಳನ್ನು ಬೆಳೆಸಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಮುಂದುವರಿದು ಇಂತಹ ಪ್ರದೇಶವನ್ನು ಟೌನ್ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ. ಅಲ್ಲದೇ, ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ಧಕ್ಕೆ ಉಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ ಎಂದು ಎಚ್.ಡಿ ದೇವೇಗೌಡ ಅವರು ವಿವರಿಸಿದ್ದಾರೆ. ಇನ್ನು ಕರ್ನಾಟಕ ಹೌಸಿಂಗ್ ಬೋರ್ಡ್ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಗಳು ರಾಮನಗರ ಜಿಲ್ಲೆಯ ಬಿಡದಿ ಸುತ್ತ-ಮುತ್ತಲು ಹಲವಾರು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನ್ನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಅದ್ದರಿಂದ, ರಾಜ್ಯಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್ಶಿಪ್ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ರೈತರ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಬಡ ರೈತರ ಹಿತದೃಷ್ಠಿಯಿಂದ ಕೈಬಿಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಈ ಪತ್ರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು: ಇನ್ನು ಈ ಭಾಗದಲ್ಲಿ ಟೌನ್ಶಿಪ್ ನಿರ್ಮಾಣವಾಗಲಿದೆ ಎನ್ನುವ ಆತಂಕ ಈ ಭಾಗದ ರೈತರಲ್ಲಿ ನಿರ್ಮಾಣವಾಗಿದೆ. ಟೌನ್ಶಿಪ್ಗಾಗಿ ಬರೋಬ್ಬರಿ 10,000 ಎಕರೆ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ಈಗಾಗಲೇ ರಾಜ್ಯ ಸರ್ಕಾರ ಮುಂದಾಗಿದೆ. ಈ ರೀತಿ ಇರುವಾಗಲೇ ಎಚ್.ಡಿ ದೇವೇಗೌಡ ಅವರು ಮಧ್ಯಪ್ರವೇಶ ಮಾಡಿದ್ದಾರೆ.