ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ ನೀಡುವ ಕೊಡುಗೆಗಳು ಇವೆ ನೋಡಿ..!

ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ ನೀಡುವ ಕೊಡುಗೆಗಳು ಇವೆ ನೋಡಿ..!

ಬೆಂಗಳೂರು : ದಶಕಗಳ ಬಳಿಕ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ( ಸೆ. 17) ವಿಶೇಷ ಸಂಪುಟ ಸಭೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಡೆಯುತ್ತಿರುವ ೪ನೇ ಸಚಿವ ಸಂಪುಟ ಸಭೆ ಇದಾಗಿದ್ದು, ಈ ಭಾಗದಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳು, ಕನಸುಗಳು ಗರಿಗೆದರುತ್ತಿವೆ.

ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ. ಕಳೆದ ಒಂದು ದಶಕದ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. ಆ ಬಳಿಕ 2008 ರಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. 2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು, ಇದೀಗ 2024 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಕಲಬುರಗಿ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಕಲಬುರಗಿ ತಾಲೂಕಿನ ಕವಲಗ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಮತ್ತು ಜಯಂತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಗ್ಗೆ ಅವರು, ಕಲಬುರಗಿಯಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೆ, ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು. ಈ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 9 ಸಾವಿರದ 5೦೦ ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *