ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಕೇಂದ್ರ ಸರ್ಕಾರದಲ್ಲಿ ರಾಜ್ಯದ ಐವರು ಸಂಸದರಿಗೆ ಅವಕಾಶ ಸಿಕ್ಕಿದೆ. ರಾಷ್ಟ್ರಪತಿ ಭವನದಲ್ಲಿ ಸಂಜೆ 7:15ಕ್ಕೆ ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕರ್ನಾಟಕದಿಂದ ಐವರು ಸೇರಿದಂತೆ 60ಕ್ಕೂ ಹೆಚ್ಚು ಸಂಸದರು ಸಚಿವರಾಗಿ ಪದಗ್ರಹಣ ಮಾಡಿದರು.
ರಾಜ್ಯದಿಂದ ಯಾರಿಗೆ ಸಚಿವ ಸ್ಥಾನ?: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಮತ್ತು ಕರ್ನಾಟಕದಿಂದ ರಾಜ್ಯಸಭೆ ಸದಸ್ಯೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿಯ ನಾಲ್ವರಿಗೆ ಅವಕಾಶ: ಕಳೆದ ಬಾರಿ ಸಚಿವರಾಗಿದ್ದ ಪ್ರಲ್ಹಾದ್ ಜೋಶಿ ಅವರು ಪುನಃ ಮೋದಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕಳೆದ ಬಾರಿ ಇವರು ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಇನ್ನು ಕಳೆದ ಬಾರಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೂ ಕ್ಯಾಬಿನೆಟ್ ದರ್ಜೆಯ ಸ್ಥಾನ ನೀಡಲಾಗಿದೆ. ಜೊತೆಗೆ ಶೋಭಾ ಕರಂದ್ಲಾಜೆ ಕೂಡ ಪುನಃ ಮೋದಿ ಸಂಪುಟ ಸೇರಿದ್ದಾರೆ. ಇದೇ ಮೊದಲ ಬಾರಿಗೆ ತುಮಕೂರು ಸಂಸದರಾಗಿ ಆಯ್ಕೆ ಆಗಿರುವ ವಿ. ಸೋಮಣ್ಣ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.