ಮುಂಗಾರು ಕೃಷಿ KRSನಿಂದ ನೀರು: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕೃಷ್ಣರಾಜಸಾಗರ ಜಲಾಶಯದಿಂದ ನೀರು ಹರಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.

ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಕಟ್ಟು ನೀರು ಪದ್ಧತಿಯಲ್ಲಿ ಹರಿಸುವ ಕುರಿತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪ್ರಸ್ತುತ ಕೆಆರ್ ಎಸ್ ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 36 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟ 111 ಅಡಿ ತಲುಪಿದೆ. ಸದ್ಯಕ್ಕೆ 115 ಅಡಿಯವರೆಗೆ ಜಲಾಶಯದ ನೀರಿನ ಮಟ್ಟ ತಲುಪುವ ನಿರೀಕ್ಷೆ ಇದೆ. ಮುಂದೆಯೂ ಮಳೆ ಉತ್ತಮವಾಗಿ ಬಿದ್ದು ಜಲಾಶಯ ಭರ್ತಿಯಾದರೆ ಎರಡನೇ ಬೆಳೆಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಬಿನಿ ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವುದರಿಂದ ಕೆಆರ್ ಎಸ್ ನಿಂದ ನೀರು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ. ಹಾಗಾಗಿ ರೈತರು ಆತಂಕಪಡುವ ಅವಶ್ಯಕತೆ ಇಲ್ಲ. ಸಾಮಾನ್ಯವಾಗಿ ಪ್ರತಿ ವರ್ಷ ಜುಲೈ ಮಧ್ಯಭಾಗದಿಂದ ನೀರು ಹರಿಸುವುದು ವಾಡಿಕೆ. ಆ ಸಮಯದಿಂದಲೇ ಭತ್ತದ ಒಟ್ಲು ಮತ್ತು ರಾಗಿ ಬಿತ್ತನೆ ಪ್ರಾರಂಭವಾಗುತ್ತದೆ. ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಸರಿಯಾದ ಸಮಯಕ್ಕೆ ರೈತರಿಗೆ ಅನುಕೂಲವಾಗುವಂತೆ ನೀರು ಹರಿಸುವ ನಿರ್ಧಾರ ಮಾಡಿದ್ದೇವೆ. ವಿರೋಧಿಗಳು ಸುಮ್ಮನೆ ರಾಜಕೀಯ ಲಾಭ ಪಡೆಯಲು ನೀರಿನ ವಿಚಾರದಲ್ಲಿ ಟೀಕೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *