ಬೆಂಗಳೂರು: ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳ ವಿರಾಮದ ನಂತರ ಮತ್ತೆ ರಾಜ್ಯದೆಲ್ಲೆಡೆ ವರ್ಷಧಾರೆ ವ್ಯಾಪಿಸಿಕೊಂಡಿದೆ. ಕರಾವಳಿಯ ಮೂರೂ ಜಿಲ್ಲೆಗಳ ಹಲವೆಡೆ ನಿನ್ನೆ ಧಾರಾಕಾರ ಮಳೆಯಾಗಿದ್ದು, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿರುವ ಪರಿಣಾಮ ನದಿ ಹಾಗೂ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚುತ್ತಿದೆ. ಇಂದು ಹಾಗೂ ನಾಳೆ ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇಂದಿನಿಂದ ಮೂರು ದಿನ 31 ಜಿಲ್ಲೆಗಳಲ್ಲೂ ವರ್ಷಧಾರೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.