ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆ ಆಗುವುದಾಗಿ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೆಲ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.