ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡೆ ವಿರೋಧಿಸಿ ಆಗಸ್ಟ್ 31 ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಸ್ಟ್ 31 ರಂದು ರಾಜಭವನ ಚಲೋಗೆ ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವ ರಾಜ್ಯಪಾಲರು ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧವೂ ಕಾನೂನು ಕ್ರಮ ಜರುಗಿಸುವಂತೆ ಅನುಮತಿ ನೀಡಬೇಕು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಮತ್ತು ಜನಾರ್ದನರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲು ಲೋಕಾಯುಕ್ತರು ರಾಜ್ಯಪಾಲರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಒಂದು ದಶಕದಿಂದ ಪ್ರಕರಣದ ತನಿಖೆ ನಡೆಯುತ್ತಿದ್ದರೂ ರಾಜ್ಯಪಾಲರು ಅನುಮತಿ ನೀಡಿಲ್ಲ. ಹೀಗಾಗಿ, ಆಗಸ್ಟ್ 31 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ರಾಜಭವನ ಚಲೋ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆಯಿಂದ ಆರಂಭಗೊಂಡು ರಾಜಭವನಕ್ಕೆ ತಲುಪಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಸಚಿವರು, ಪಕ್ಷದ ಶಾಸಕರು, ಎಂಎಲ್ಸಿಗಳು ಮತ್ತು ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ ಎಂದರು.
ರಾಜ್ಯಪಾಲರು ಪ್ರಾಥಮಿಕ ತನಿಖೆ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವಲ್ಲಿ ಅನಗತ್ಯ ಆತುರ ತೋರಿದ್ದಾರೆ, ಆದರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧದ ಮನವಿಗಳನ್ನು ನಿರ್ಲಕ್ಷಿಸಿದ್ದಾರೆ. ಲೋಕಾಯುಕ್ತ ಮತ್ತು ಎಸ್‌ಐಟಿಗಳಿಂದ ಮಂಜೂರಾತಿಗಾಗಿ ಬಾಕಿ ಉಳಿದಿರುವ ಹಲವಾರು ಮನವಿಗಳನ್ನು ನಾವು ಈಗಾಗಲೇ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.
ಲೋಕಾಯುಕ್ತ ವಿಶೇಷ ತನಿಖಾ ತಂಡವು 2023 ರ ನವೆಂಬರ್ 21 ರಂದು ರಾಜ್ಯಪಾಲರಿಗೆ ಪತ್ರವನ್ನು ಕಳುಹಿಸಿದ್ದು, ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿಗೆ ಅಕ್ರಮವಾಗಿ ಭೂಮಿ ಹಂಚಿಕೆ ಆರೋಪದ ಬಗ್ಗೆ ಕುಮಾರಸ್ವಾಮಿ ವಿರುದ್ಧದ ಆರೋಪಗಳನ್ನು ವಿವರಿಸಲಾಗಿದೆ. ಹತ್ತು ವರ್ಷಗಳ ಹಿಂದೆ ಕೂಲಂಕುಷ ತನಿಖೆ ನಡೆಸಿದ್ದರೂ, ಯಾವುದೇ ಅನುಮತಿ ನೀಡಲಾಗಿಲ್ಲ. ಅಕ್ರಮ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಲೋಕಾಯುಕ್ತರು 17ಎ ಕಲಂ ಅಡಿಯಲ್ಲಿ ಪ್ರಾಸಿಕ್ಯೂಷನ್’ಗೆ ಅನುಮತಿ ಕೋರಿದ್ದಾರೆ. ಈ ಎಲ್ಲಾ ಪ್ರಕರಣಗಳ ಪ್ರಾಥಮಿಕ ತನಿಖೆ ಮುಗಿದಿದೆ, ಆದರೂ ಅನುಮತಿ ನೀಡಿಲ್ಲ ಎಂದು ತಿಳಿಸಿದರು.