ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಮುಡಾ ಹಗರಣದ ಕುರಿತು ಈಗಾಗಲೇ ಮೈಸೂರು ಲೋಕಾಯುಕ್ತರು, ಇಡಿ ತನಿಖೆಯನ್ನು ನಡೆಸುತ್ತಿದೆ. ಈ ಹಗರಣದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜರಿಯಾ ನೇತೃತ್ವದ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಏಕ ಸದಸ್ಯ ಪೀಠ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.
ಇಂದು ಅರ್ಜಿಯ ವಿಚಾರಣೆ ಸಮಯದಲ್ಲಿ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ವಿಚಾರಣೆಯನ್ನು ಜನವರಿ 13 ಅಥವ 23ಕ್ಕೆ ಮುಂದೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು. ವಕೀಲರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿ ಮಾಡಿದೆ