ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ಹೈ ಕೋರ್ಟ್‌ ರಿಲೀಫ್

Siddaramaiah Appeal High court

Siddaramaiah Appeal High court

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆಗಸ್ಟ್ 29ರವರೆಗೂ ಸಿಎಂ ಸಿದ್ದರಾಮಯ್ಯಗೆ ರಿಲೀಫ್ ನೀಡಿದೆ. ತಕ್ಷಣಕ್ಕೆ ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ತನಿಖೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು, ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು. ಸಿಎಂ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು.

“ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧ. ಶಾಸನಬದ್ಧ ಆದೇಶಗಳನ್ನು ಉಲ್ಲಂಘಿಸಲಾಗಿದೆ. ಸಚಿವ ಸಂಪುಟದ ಸಲಹೆಯನ್ನು ರಾಜ್ಯಪಾಲರು ನಿರಾಕರಿಸಿದ್ದಾರೆ. ಯಾವ ಕಾರಣಕ್ಕೆ ಅನುಮತಿ ನೀಡಲಾಗಿದೆ ಎಂಬ ಅಂಶವನ್ನು ಅವರು ವಿವರಿಸಿಲ್ಲ. ಹಾಗಾಗಿ, ಈ ಅನುಮತಿ ರಾಜಕೀಯ ದುರುದ್ಧೇಶಗಳಿಂದ ಕೂಡಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಕೂಡಿದೆ” ಎಂದು ಅವರು ವಾದ ಮಂಡಿಸಿದರು.

“ರಾಜ್ಯಪಾಲರು ಸಚಿವ ಸಂಪುಟದ ನಿರ್ಧಾರಕ್ಕೆ ಬದ್ಧರಾಗಿರಬೇಕು. ಆದರೆ, ಎರಡು ಪುಟಗಳ ಸಣ್ಣ ಆದೇಶದಲ್ಲಿ ಒಂದು ಅಂಶವನ್ನು ಪ್ರಾಸಿಕ್ಯೂಷನ್‌ಗೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಆ ಮೂಲಕ ಜನರಿಂದ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯಪೀಠ, ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲವೇ” ಎಂದು ಪ್ರಶ್ನಿಸಿತು.

ಇದಕ್ಕೆ ಸಿಂಘ್ವಿ, “ನಿವೇಶನಗಳ ಮರು ಹಂಚಿಕೆ ಮಾಡಿರುವ ಪ್ರಕ್ರಿಯೆ ಈ ಹಿಂದಿನ ಸರ್ಕಾರದಲ್ಲಿ ನಡೆದಿದೆ. ಸಿದ್ದರಾಮಯ್ಯ ವಿರುದ್ದ ಯಾವುದೇ ದಾಖಲೆಗಳು ಕಂಡು ಬಂದಿಲ್ಲ. ಸಿದ್ದರಾಮಯ್ಯ ವಿರುದ್ಧ ಯಾವುದೇ ಪಾತ್ರವಿಲ್ಲ. ಅಲ್ಲದೆ, ಬಿಎನ್‌ಎಸ್‌ಎಸ್ ಸೆಕ್ಷನ್ 218ರ ಅಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಆದರೆ, ಈ ಸೆಕ್ಷನ್ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕಾದಲ್ಲಿ ನಿರ್ಧಿಷ್ಟ ಅಪರಾದವನ್ನು ಒಳಗೊಂಡಿರಬೇಕು. ಅಲ್ಲದೆ, ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ನಡೆದಿರಬೇಕು” ಎಂದರು.

“ಶೋಕಾಸ್ ನೋಟಿಸ್ ಜಾರಿ ಮಾಡಿರುವುದು ಅಬ್ರಾಹಂ ನೀಡಿರುವ ಅರ್ಜಿಗೆ ಸಂಬಂಧಿಸಿದ್ದಾಗಿದೆ. ಈ ಕುರಿತ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡು ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಜೊತೆಗೆ, ಇನ್ನಿಬ್ಬರು ನೀಡಿರುವ ಮನವಿಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಿಲ್ಲ. ಆದರೆ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಇತರೆ ಇಬ್ಬರು ದೂರುದಾರರಿಗೆ ಅನುಮತಿ ನೀಡಲಾಗಿದೆ” ಎಂದು ಸಿಂಘ್ವಿ ನಾಯಾಲಯಕ್ಕೆ ತಿಳಿಸಿದರು.

“ಅಬ್ರಾಹಂ ದೂರು ಸಲ್ಲಿಸಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ರಾಜ್ಯಪಾಲರ ಮುಂದೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸುಮಾರು 12 ಅರ್ಜಿಗಳು ಬಾಕಿಯಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಉದ್ದೇಶವಾಗಿದೆ” ಎಂದು ವಿವರಿಸಿದರು.

“ಮುಖ್ಯಮಂತ್ರಿಗಳು (ಪ್ರಕರಣದಲ್ಲಿ ಆರೋಪಿ) ಗೈರಾಗಿರುವ ಸಚಿವ ಸಂಪುಟದಲ್ಲಿ ಕಾನೂನುಬದ್ಧವಾಗಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯಪಾಲರು ಸ್ವತಂತ್ರ್ಯವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ, ಇದೆಲ್ಲವೂ ಸತ್ಯಕ್ಕೆ ದೂರವಾದ ಅಂಶಗಳಾಗವೆ” ಎಂದು ಪೀಠಕ್ಕೆ ವಿವರಿಸಿದರು.

ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಆಗಸ್ಟ್ 29ಕ್ಕೆ ಮುಂದೂಡಿ ಆದೇಶ ನೀಡಿದೆ.

Leave a Reply

Your email address will not be published. Required fields are marked *