ನವದೆಹಲಿ: ನೈಋತ್ಯ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬನಿಂದ ಲೈಂಗಿಕ ದೌರ್ಜನ್ಯ ನಡೆದಿದ್ದು, ನಂತರ ಬಾಲಕಿ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿಯನ್ನು ಎಂಡಿ ರೆಹಾನ್ ಎಂದು ಗುರುತಿಸಲಾಗಿದ್ದು, ಆತ ಮದುವೆಯ ನೆಪವೊಡ್ಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಕ್ಷೇಪಾರ್ಹ ಚಿತ್ರಗಳನ್ನು ತೋರಿಸಿ ಆಕೆಗೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 18 ರಂದು ಬೆನ್ನುಮೂಳೆಯ ಗಾಯಗಳ ಆಸ್ಪತ್ರೆಯಿಂದ ಎಂಎಲ್ಸಿ (ವೈದ್ಯಕೀಯ-ಕಾನೂನು ಪ್ರಕರಣ) ವರದಿ ಬಂದ ನಂತರ ಬಾಲಕಿಯೊಬ್ಬಳು ಆ್ಯಸಿಡ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಮಾಹಿತಿ ತಿಳಿದುಬಂದಿದೆ ಎಂದು ಅವರು ಹೇಳಿದರು.
ಪೊಲೀಸರ ತಂಡ ಆಸ್ಪತ್ರೆಗೆ ತಲುಪಿತು. ಆದರೆ, ಆ ಸಮಯದಲ್ಲಿ ಬಾಲಕಿ ಹೇಳಿಕೆ ದಾಖಲಿಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಅಪರಾಧ ತಂಡವನ್ನು ನಿಯೋಜಿಸಲಾಗಿದ್ದು, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯೆಲ್ ತಿಳಿಸಿದ್ದಾರೆ.