ನವದೆಹಲಿ: ಗೋದಾವರಿ-ಕೃಷ್ಣಾ-ಕಾವೇರಿ ನದಿಗಳ ಜೋಡಣೆಯಿಂದ ರಾಜ್ಯಕ್ಕೆ ಕೇವಲ 2 ಟಿಎಂಸಿ ಅಡಿ ನೀರು ಲಭ್ಯವಾಗಲಿದ್ದು, ಇದು ಘೋರ ಅನ್ಯಾಯ. ನದಿ ಜೋಡಣೆಯ ಪ್ರಸ್ತಾವವನ್ನು ಪರಿಷ್ಕರಿಸಿ ರಾಜ್ಯಕ್ಕೆ ನ್ಯಾಯಯುತ ನೀರಿನ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಆಗ್ರಹಿಸಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯಕ್ಕೆ ನ್ಯಾಯಯುತ ಪಾಲು ಹಂಚಿಕೆಯಾಗುವ ತನಕ ನದಿ ಜೋಡಣೆಯ ಕರಡಿಗೆ ರಾಜ್ಯ ಸಹಿ ಹಾಕುವುದಿಲ್ಲ’ ಎಂದೂ ಸ್ಪಷ್ಟಪಡಿಸಿದರು.
ನದಿ ಜೋಡಣೆಯಿಂದ ಐದು ರಾಜ್ಯಗಳಿಗೆ 147 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ರಾಜ್ಯಕ್ಕೆ 15 ಟಿಎಂಸಿ ಅಡಿ ನೀರು ನೀಡಲು ಪ್ರಸ್ತಾಪಿಸಲಾಗಿದೆ. ಆದರೆ, ಕುಡಿಯುವ ನೀರಿನ ಉದ್ದೇಶಕ್ಕೆ ಸಿಗುವುದು 2 ಟಿಎಂಸಿ ಅಡಿ ಮಾತ್ರ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.
‘ದೇಶದಲ್ಲಿ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ದವಾಗಿದೆ’ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತುರ್ತು ಗಮನ ಹರಿಸಬೇಕು. ಬಾಕಿಯಿರುವ ಎಲ್ಲ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ ನೀಡಲು ಜಲಶಕ್ತಿ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಾಗೂ ರೈತರ ಕಲ್ಯಾಣಕ್ಕೆ ನೆರವಾಗಲಿದೆ’ ಎಂದು ಅವರು ಹೇಳಿದರು.