ನವದೆಹಲಿ: ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.
ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೂ ಮಾತನಾಡಿದ್ದೇನೆ. ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆಂದು ತಿಳಿಸಿದ್ದಾರೆ.
ಜನವರಿ 28 ರ ಮಧ್ಯರಾತ್ರಿ ನಂತರ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದನ್ನು ಉತ್ತರ ಪ್ರದೇಶ ಆಡಳಿತ ಇನ್ನೂ ಬಹಿರಂಗಪಡಿಸಿಲ್ಲ.