ಇಂತಿಯಾಜ್ ಪಾಷಾ ಸಾವಿಗೆ ಸಂಶಯದ ನೆರಳು; ಯುಡಿಆರ್ ಪ್ರಕರಣದಲ್ಲಿ ಮರು ತನಿಖೆ ಆರಂಭ
ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಂತ್ಯಸಂಸ್ಕಾರ ಮಾಡಲಾಗಿದ್ದ ವ್ಯಕ್ತಿಯ ಸಾವಿಗೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸುಮಾರು ಆರು ತಿಂಗಳ ಬಳಿಕ ಶವವನ್ನು ಹೊರತೆಗೆದು ಮರು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಇಂತಿಯಾಜ್ ಪಾಷಾ ಎಂದು ಗುರುತಿಸಲಾಗಿದ್ದು, ಆರು ತಿಂಗಳ ಹಿಂದೆ ತಮ್ಮ ಮನೆಯಲ್ಲಿ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವಾಗಿದೆ ಎಂದು ಹೇಳಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಆದರೆ ಇದೀಗ ಇಂತಿಯಾಜ್ ಪಾಷಾ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತನ ಪತ್ನಿಗೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧವಿದ್ದು, ಆತನೊಂದಿಗೆ ಮದುವೆಯಾಗಲು ಮುಂದಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಇಂತಿಯಾಜ್ ಪಾಷಾ ಅವರ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಸಹೋದರನ ಪತ್ನಿ ಹಾಗೂ ಆಕೆಯ ಸ್ನೇಹಿತನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ದೂರಿನ ಆಧಾರದ ಮೇಲೆ ತಹಶೀಲ್ದಾರ್ ಆದೇಶದಂತೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲಾಗಿದ್ದು, ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು (ಯುಡಿಆರ್) ಪ್ರಕರಣ ದಾಖಲಿಸಲಾಗಿದೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




