ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆ ಟೋಲ್ ರದ್ದು ಸಾಧ್ಯತೆ.

ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆ ಟೋಲ್ ರದ್ದು ಸಾಧ್ಯತೆ.

ಶೀಘ್ರದಲ್ಲೇ ಹೊಸ ಸಂಪರ್ಕ ರಸ್ತೆ ಉದ್ಘಾಟನೆ

ಬೆಂಗಳೂರು: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್​​ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್​​ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್​​ ನ್ಯೂಸ್​​ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ ಟೋಲ್ ವಸೂಲಿ ಮಾಡುವುದನ್ನು ರದ್ದುಪಡಿಸುವ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ರಾಮೋಜಿ ಗೌಡ ಅವರು ನೈಸ್ ರಸ್ತೆ ಯೋಜನೆಗಾಗಿ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವ ವಿಷಯವನ್ನು ಪ್ರಸ್ತಾಪಿಸಿದ ಸಂದರ್ಭದಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ನೈಸ್ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳು ಹೆಚ್ಚುತ್ತಿವೆ. ಜೊತೆಗೆ ರಸ್ತೆ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ರಾಮೋಜಿ ಗೌಡ ಆರೋಪಿಸಿದ್ದು, ರಾಜ್ಯ ಸರ್ಕಾರ ಮತ್ತು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ನಡುವೆ ಮಾಡಿಕೊಂಡಿರುವ ಒಪ್ಪಂದ ಅವಧಿ ಮುಕ್ತಾಯವಾಗುತ್ತಿದೆ. ಹೀಗಿದ್ದರೂ ಭೂಮಿ ನೀಡಿದ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಗೃಹ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಚಿವ ಸಂಪುಟದ ಉಪ ಸಮಿತಿ ಯೋಜನೆಯ ಸ್ಥಿತಿ, ಒಪ್ಪಂದದ ಷರತ್ತುಗಳು, ಟೋಲ್ ವಸೂಲಿ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಲಿದೆ. ಉಪ ಸಮಿತಿ ತನ್ನ ವರದಿ ಸಲ್ಲಿಸಿದ ಬಳಿಕ ದ್ವಿಚಕ್ರ ವಾಹನಗಳಿಗೆ ಟೋಲ್ ರದ್ದುಪಡಿಸುವ ಯೋಜನೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *