ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್‌

ದೆಹಲಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಯತ್ನಾಳ್ ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿದೆ. ನಮ್ಮ ಮತ್ತು ಯತ್ನಾಳ್ ನಡುವೆ ಬೇರೆಯದೇ ರಾಜಕೀಯವಿದೆ ಎಂದರು.

ಅವರ ವಿರುದ್ಧ ಈಗಾಗಲೇ ₹200 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ಮುಂದೆ ಮಾತನಾಡೋಣ ಎಂದು ತಿಳಿಸಿದರು.

ಕಳೆದ ಎರಡು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತ್ನಾಳ್, ಮುಡಾ ಹಗರಣ ಮುಂದಿಟ್ಟುಕೊಂಡು ನಮ್ಮ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿದ್ದಾರೆ. ಅವರು ಸಿದ್ದರಾಮಯ್ಯರ ವಿರುದ್ಧ ಹೊರಟಿದ್ದಾರೋ ಅಥವಾ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೋ ಎಂಬುವುದನ್ನು ನಾವು ನೋಡಬೇಕಿದೆ ಎಂದಿದ್ದರು.

Leave a Reply

Your email address will not be published. Required fields are marked *