ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಯೋಜನೆಯ ಐದನೇ ಹಂತಕ್ಕೆ ಅ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ.
ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸಹಭಾಗಿತ್ವದಲ್ಲಿ 4336 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್’ಡಿ ನೀರು ಲಭ್ಯವಾಗಲಿದೆ. 50 ಲಕ್ಷ ಜನರಿಗೆ ಸದುಪಯೋಗವಾಗಲಿದೆ.
ಬೆಂಗಳೂರಿನ ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅವರುೋ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರಿಗೆ ಸಮಾರಂಭದ ಆಹ್ವಾನ ಪತ್ರಿಕೆ ನೀಡಿದರು.
ಯೋಜನೆಯು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ(ಟಿ.ಕೆ.ಹಳ್ಳಿ)ಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ. ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ/ರಾಜ್ಯ ಸಚಿವರುಗಳು ಹಾಗೂ ಸಂಸದರು ಮತ್ತು ಶಾಸಕರು ಹಾಗೂ ಇನ್ನೀತರ ಎಲ್ಲ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಮನೆಮನೆಗೂ ಕಾವೇರಿ ನೀರು ತಲುಪಿಸಿ ಸಮೃದ್ಧ ಬೆಂಗಳೂರಿಗೆ ಕೈ ಜೋಡಿಸಿರುವ ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಕೌನ್ಸಲ್ ಜನರಲ್ ಆಫ್ ಜಪಾನ್ ಇನ್ ಇಂಡಿಯಾದ ಟ್ಸುಟೋಮು, ಭಾರತದಲ್ಲಿ ಜಪಾನ್ ರಾಯಭಾರ ಕಚೇರಿಯ ಆರ್ಥಿಕ ಸಚಿವ (ಆರ್ಥಿಕ ಮತ್ತು ಅಭಿವೃದ್ಧಿ)ರಾದ ಹೊಕುಗೋ ಕ್ಯೋಕು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.