ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬರುತ್ತಿರುವ ಮುಡಾ ಹಗರಣದ ಸಂಬಂಧ ಹೋರಾಟವನ್ನು ಮತ್ತಷ್ಟು ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಳೆ ಹಮ್ಮಿಕೊಳ್ಳಲು ಉದ್ದೇಶಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಶುಕ್ರವಾರ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.
ಇದುವರೆಗೆ ಸರ್ಕಾರ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿಕೊಂಡು ಬರುತ್ತಿತ್ತು. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವರೇ ಹೇಳಿದ್ದರು.
ಇಂದು ಬೆಳಗ್ಗೆಯಷ್ಟೇ ಮಾತನಾಡಿದ್ದ ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಕೂಡ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.