ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ” ಎಂದರು.

”ರಾಜ್ಯದ ಜನತೆ ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಅಪರಾಧವಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು” ಎಂದು ಬಿಎಸ್​ವೈ ಇದೇ ವೇಳೆ ಆಗ್ರಹಿಸಿದರು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ 2 ಬಾರಿ ನೋಟಿಸ್​ ನೀಡಿದ್ದರು. ಆದರೆ ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ಇದರಿಂದಾಗಿ ಮಾಜಿ ಸಿಎಂ ಬಂಧನ ಭೀತಿಯಿಂದ ನಿರಾಳರಾಗಿದ್ದರು. ಕೋರ್ಟ್​ ನಿರ್ದೇಶನದಂತೆ ಇಂದು ಅವರು ಸಿಐಡಿ ಎದುರು ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *