ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ಸಿಐಡಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದ ವಿಚಾರಣೆಗೆ ಅಗತ್ಯ ಇರುವುದರಿಂದ ಅವರನ್ನು ಜೂನ್ 12ರಂದು ಬಾಡಿ ವಾರಂಟ್ ಆಧಾರದಲ್ಲಿ ಎಸ್ಐಟಿ ವಶಕ್ಕೆ ಪಡೆದಿತ್ತು.
ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೂ ಸಹ ಸರಿಯಾಗಿ ಸ್ಪಂದಿಸದ ಪ್ರಜ್ವಲ್ ರೇವಣ್ಣ ಅವರನ್ನ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿರುವ ಎಸ್ಐಟಿ ಅಧಿಕಾರಿಗಳು ಮತ್ತೊಮ್ಮೆ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಿ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಅವರ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಜೂನ್ 10 ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು