ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು, ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಆಂಧ್ರ ಪ್ರದೇಶ ಸಿಎಂ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ(ಟಿಡಿಪಿ) ಹೇಳಿದೆ.
ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂರೆಡ್ಡಿ ಅವರು, ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗಿದೆ ಎಂದು ಖಚಿತವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ..!
ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.