ಬೆಂಗಳೂರಿಗಾಗಿ Rs1.15 ಲಕ್ಷ ಕೋಟಿಗೆ ಬೇಡಿಕೆ ಇಟ್ಟ Siddaramaiah : ಕೇಂದ್ರ ಸಚಿವೆ ಹೇಳಿದ್ದೇನು?

ಬೆಂಗಳೂರಿಗಾಗಿ ₹1.15 ಲಕ್ಷ ಕೋಟಿಗೆ ಬೇಡಿಕೆ ಇಟ್ಟ Siddaramaiah : ಕೇಂದ್ರ ಸಚಿವೆ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇಂದು ದಿನವಿಡೀ ಸಿದ್ದರಾಮಯ್ಯ ಅವರು ಸುದೀರ್ಘ ಚರ್ಚೆ ನಡೆಸಿದ್ದು, ಕರ್ನಾಟಕಕ್ಕೆ ಸಂಬಂಧಿಸಿದ ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಗಳ ಬಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದೆ. ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ರೂಪಾಯಿ ಬೇಕಾಗಿದೆ. ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತ ಸಚಿವರು ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *