ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯವನ್ನು ಸರಿಯಾಗಿ ನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಗುತ್ತಿಗೆದಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ತರಬೇತಿ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಿಭಾಗದ ಅಭಿಯಂತರರು ಹಾಗೂ ಗುತ್ತಿಗೆದಾರರ ಜೊತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಹಲವು ಕಡೆ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಗಮನಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿರುವಂತೆ ನೋಡಿಕೋಳ್ಳಲು ಸೂಚನೆ ನೀಡಲಾಯಿತು.
ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಎಲ್ಲೆಲ್ಲಿ ವಿದ್ಯುತ್ ಕಂಬಗಳು ಹಾಳಾಗಿವೆ ಎಂಬುದನ್ನು ಪರಿಶೀಲಿಸಿ ಜಿಯೋ ಲೊಕೇಶನ್ ಮೂಲಕ ಪಟ್ಟಿ ಸಿದ್ದಪಡಿಸಬೇಕು. ಅನಂತರ ತ್ವರಿತಗತಿಯಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಹೊರ ವರ್ತುಲ ರಸ್ತೆ, ಪ್ರಮುಖ ರಸ್ತೆಗಳು ಹಾಗೂ ಮೇಲುಸೇತುವೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಚಿಸಲಾಯಿತು.
ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಏನಾದರು ಸಮಸ್ಯೆ ಇದ್ದಲ್ಲಿ ಅದನ್ನು ಬಗೆಹರಿಸಲಾಗುವುದು. ಬೀದಿ ದೀಪಗಳ ಅಳವಡಿಕೆ ಸಂಬಂಧ ಶೀಘ್ರ ಟೆಂಡರ್ ಕರೆಯಲಾಗುವುದೆಂದು ತಿಳಿಸಿದರು.
ನಗರದಲ್ಲಿ ಬೀದಿ ಬದಿ ದೀಪಗಳನ್ನು ಶೀಘ್ರ ಅಳವಡಿಸಿ ಸರಿಯಾಗಿ ನಿರ್ವಹಣೆ ಮಾಡಲಾಗುವುದೆಂದು ಗುತ್ತಿಗೆದಾರರು ಮುಖ್ಯ ಆಯುಕ್ತರಿಗೆ ಭರವಸೆ ನೀಡಿದರು. ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಗುತ್ತಿಗೆದಾರರು ಉಪಸ್ಥಿತರಿದ್ದರು.