ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಓರ್ವ ಮೃತಪಟ್ಟಿರುವ ದಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ತಾಳುಬೆಟ್ಟದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಗ್ರಾಮವೊಂದರ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯ ಯಜಮಾನ ಮೃತಪಟ್ಟಿದ್ದು, ಪತ್ನಿ, ಮಗಳು ಹಾಗೂ ಮೊಮ್ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಲೆ ಮಹದೇಶ್ವರ ಬೆಟ್ಟದತ್ತ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆ ನಿರ್ಧಾರಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದಂತೆ ಮೊಮ್ಮಗಳು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡ ತಾಯಿ ಹಾಗೂ ಮಗಳಿಗೆ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ದಾಖಲಿಸಿ ಪ್ರಥಮ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.