ಬೆಂಗಳೂರು : ಕೇಂದ್ರ ಸರ್ಕಾರ ಇಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಹೊರಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಹೊರಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮೋದಿಗೆ ಧಿಕ್ಕಾರ, ಅಮಿತ್ ಶಾ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ವಾಲ್ಮೀಕಿ ನಿಗಮ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಅಧಿಕಾರಿಗಳನ್ನು ಒತ್ತಾಯಿಸಲಾಗುತ್ತಿದೆ ಎಂದು ಇಡಿ ವಿರುದ್ಧ ದೂರು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳನ್ನು ಬಂಧಿಸಿ ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಮೇಲೆ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದೆ. ಇಡಿ ಅಧಿಕಾರಿಗಳು ತಾವು ಭಾಗಿಯಾಗದ ಹಗರಣಗಳಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಹೆಸರಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ… ನಾವು ಇಲ್ಲಿ ಪ್ರಾಧಿಕಾರದ ಕಾರ್ಯನಿರ್ವಹಣೆ ಅಥವಾ ತನಿಖೆಯನ್ನು ಪ್ರಶ್ನಿಸುತ್ತಿಲ್ಲ, ಆದರೆ ನೀವು ಸರ್ಕಾರಿ ಅಧಿಕಾರಿಗಳ ಮೇಲೆ (ಸಿಎಂ ಮತ್ತು ಡಿಸಿಎಂ) ಅವರ ಹೆಸರನ್ನು ಹೇಳಲು ಒತ್ತಡ ಹೇರಲು ಸಾಧ್ಯವಿಲ್ಲ. ಇದು ಸ್ಕ್ರಿಪ್ಟ್ ಮಾಡಿದ ತನಿಖೆಯಾಗಿದ್ದು, ನಡೆಯುತ್ತಿದೆ ಎಂದು ತಿಳಿಸಿದ್ದಾರೆ.